ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರತಿ ತಿಂಗಳು 2 ಪುಟ ವಿಶೇಷ ಜಾಹೀರಾತು ನೀಡಲು ಭೀಮರಾಯ ಹದ್ದಿನಾಳ ಒತ್ತಾಯ
ರಾಯಚೂರು :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವಂತಹ ಏಳು ಜಿಲ್ಲೆಗಳ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟಗಳ ವಿಶೇಷ ಜಾಹೀರಾತು ನೀಡಬೇಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಭೀಮರಾಯ ಹದ್ದಿನಾಳ ಒತ್ತಾಯಿಸಿದರು.
ಅವರು ಬುಧವಾರ ನಗರದ ಪತ್ರಿಕಾಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
371 ಜೆ ಅಡಿಯಲ್ಲಿ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಈವರೆಗೂ ಯಾವುದೇ ಸೌಲಭ್ಯ ನೀಡಿಲ್ಲ. ಸರ್ಕಾರವು ಈ ನಿಟ್ಟಿನಲ್ಲಿ ಗಮನ ಹರಿಸಬೇಕಾಗಿದೆ.
ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರಕಟವಾಗುತ್ತಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟ ಜಾಹೀರಾತು ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು. ಈ ಮೂಲಕ ಪತ್ರಿಕೆಗಳಿಗೆ ಉತ್ತೇಜನ ನೀಡಬೇಕು ಎಂದರು.
ಸಂವಿಧಾನದ ಕಲಂ ೩೭೧(ಜೆ) ಅನ್ವಯ ವಿಶೇಷ ಸ್ಥಾನಮಾನ ಕಲ್ಪಿಸಲಾಗಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳಲ್ಲಿ ಪ್ರಕಟವಾಗುವ ಪತ್ರಿಕೆಗಳಿಗೆ ಕರ್ನಾಟಕ ಸರ್ಕಾರದ ಜಾಹೀರಾತು ನೀತಿ-೨೦೧೩ ಮತ್ತು ಅನುಷ್ಠಾನ ನಿಯಮಗಳು-೨೦೧೪ ಅಧ್ಯಾಯ ೪ ಅಂಗೀಕೃತ ಮಾಧ್ಯಮ ಪಟ್ಟಿ-೧೧೭/೧)ರ ಅನ್ವಯ ಪ್ರಸಾರ ಸಂಖ್ಯೆ ಮತ್ತು ಮಾಧ್ಯಮ ಪಟ್ಟಿಗೆ ಸೇರ್ಪಡೆಗೆ ವಿಶೇಷ ರಿಯಾಯಿತಿ ಕಲ್ಪಿಸಲಾಗಿದೆ. ೩೭೧ (ಜೆ) ಅನುಷ್ಠಾನ ಮಾರ್ಗಸೂಚಿಯಲ್ಲಿ ಸ್ಥಳೀಯ ಪತ್ರಿಕೆಗಳ ಸಬಲೀಕರಣಕ್ಕೆ ಉತ್ತೇಜನ ನೀಡಲು ಸೂಚಿಸಲಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಸ್ಥಳೀಯ ಪತ್ರಿಕೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಜಾಹೀರಾತು ನೀಡಲು ಅವಕಾಶವಿರುತ್ತದೆ ಎಂದರು.
ಸೆ.17 ರಂದು ಕಲಬುರಗಿ ನಗರದಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. ಅಂದು ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಸಂಪಾದಕರ ಸಂಘವು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಈಗಾಗಲೇ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರಿಗೂ ಆಯಾ ಜಿಲ್ಲಾ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಲಿದ್ದಾರೆ ಎಂದ ಅವರು, ಕಲ್ಯಾಣ ಕರ್ನಾಟಕ ಭಾಗದ ಪತ್ರಿಕೆಗಳಿಗೆ ವಿಶೇಷ ಸೌಲಭ್ಯ ನೀಡುವ ಸಂಬಂಧ ಹೊಸದಾಗಿ ರಚಿಸುವ ಜಾಹೀರಾತು ನೀತಿಯಲ್ಲಿ ಸೇರಿಸಲು ಸಂಘವು ಮುಂದಿನ ದಿನಗಳಲ್ಲಿ ಮನವಿ ಮಾಡಲಿದೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚನ್ನಬಸವ ಬಾಗಲವಾಡ, ರಾಜ್ಯ ಖಜಾಂಚಿ ಖಾನ್ ಸಾಬ್ ಮೋಮಿನ್ ಇದ್ದರು.