ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ದೇಶದ ಬಡವರಿಗಾಗಿ 4 ಕೋಟಿಗೂ ಅಧಿಕ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು , ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಶ್ರೀ.ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯ ಹೆಮ್ಮನಬೇತೂರು ಗ್ರಾಮದಲ್ಲಿ ಇಂದು ಆಯೋಜಿಸಲಾಗಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನಪರ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬಡ ಕುಟುಂಬ ಗಳಿಗೆ ಉಚಿತ ಎಲ್. ಪಿ.ಜಿ ಸಂಪರ್ಕ ಕಲ್ಪಿಸಲಾಗಿದೆ . ಮುಂದಿನ ಮೂರು ವರ್ಷಗಳಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಸಚಿವರು ಹೇಳಿದರು.
ಕನ್ನಡದ ಹಿತರಕ್ಷಣೆ ಕಾಯುವಲ್ಲಿ ನಾವೆಲ್ಲರೂ ಹೋರಾಡಬೇಕಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.
ದಾವಣಗೆರೆ ಸಂಸದರಾದ ಶ್ರೀ.ಜಿ.ಎಂ.ಸಿದ್ದೇಶ್ವರ ಮಾತನಾಡಿ, ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೈ ಗೊಂಡಿರುವ ಜನಕಲ್ಯಾಣ ಕಾರ್ಯಕ್ರಮಗಳಿಂದ ದೇಶದ ಅಭಿವೃದ್ಧಿಯ ಚಿತ್ರಣ ಬದಲಾಗಿದೆ ಎಂದರು.
ಉಜ್ವಲ 2.0 ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ ಮತ್ತೆ ನಾಲ್ಕು ಲಕ್ಷ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಿಲಿಂಡರ್ ವಿತರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಸಚಿವರು ವಿತರಿಸಿದರು. ಸಂಕಲ್ಪ ಯಾತ್ರೆ ಅಂಗವಾಗಿ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಆಯೋಜಿಸಲಾಗಿತ್ತು.