ಅಂತಿಮ ಮತದಾರರ ಪಟ್ಟಿಯಲ್ಲಿ 2004 ಶಿಕ್ಷಕರು: ಜನವರಿ 20 ರವರೆಗೆ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ:ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್

Kalabandhu Editor
1 Min Read

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 18(ಕರ್ನಾಟಕ ವಾರ್ತೆ):- ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಅರ್ಹ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಜನವರಿ 20 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು 2024 ರ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 20 ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಯ ಮಾದರಿ ಚುನಾವಣಾ ನೀತಿ ಸಂಹಿತೆಯು ದಿನಾಂಕ 16.01.2024 ರಿಂದಲೇ ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಹೇಳಿದರು.
ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರ ಪಟ್ಟಿಯಂತೆ 1044 ಪುರುಷ ಶಿಕ್ಷಕರು ಹಾಗೂ 960 ಮಹಿಳಾ ಶಿಕ್ಷಕಿಯರು ಸೇರಿ ಒಟ್ಟು 2004 ಶಿಕ್ಷಕರು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ. ಅರ್ಹ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಜನವರಿ 20 ರವರೆಗೆ ಅವಕಾಶ ಕಲ್ಪಿಸಲಾಗಿದ್ದು ಅರ್ಹ ಶಿಕ್ಷಕರು ನೋಂದಾಯಿಸಿಕೊಳ್ಳಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ ಎನ್ ಅವರು ತಿಳಿಸಿದರು.

Share this Article