ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಸರ್ಕಾರಿ ನೌಕರರ ಬೇಡಿಕೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳ ಸಮಯವನ್ನು ಕೋರಿದ್ದರು.ಅದರಂತೆ ಮಂಗಳವಾರ ಮುಖ್ಯಮಂತ್ರಿಗಳು ಸಮಯ ನೀಡಿದ್ದರು.
ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಮಾಜಿ ಅಧ್ಯಕ್ಷ ಎಲ್. ಬೈರಪ್ಪ ರವರು ಜೂನ್ 25 ರ ಸಂಜೆ 5.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿ, 7ನೇ ವೇತನ ಆಯೋಗದ ಶಿಫಾರಸು ವರದಿಯನ್ನು ಶೀಘ್ರ ಜಾರಿಗೊಳಿಸುವಂತೆ ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮನವಿ ಮಾಡಿದರು.
7ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವ ಸಂಪುಟದ ಸಚಿವರುಗಳು ಅನೌಪಚಾರಿಕವಾಗಿ ಅನುಮತಿ ನೀಡಿರುತ್ತಾರೆ. ಆದಷ್ಟು ಶೀಘ್ರದಲ್ಲೇ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಮುಖ್ಯಮಂತ್ರಿಯವರು ನೀಡಿದರು.
2024-ನೇ ಸಾಲಿನ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಗಸ್ಟ್ ತಿಂಗಳಲ್ಲಿ ನಡೆಸಲು ಅನುಮತಿ ಸಹ ನೀಡಿದರು.
ನಮ್ಮ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಪರವಾಗಿದ್ದು, ತಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಯಾರು ಆತಂಕ ಪಡುವ ಅವಶ್ಯಕತೆಯಿಲ್ಲ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು.
ರಾಜ್ಯ ಸಂಘದ ಪದಾಧಿಕಾರಿಗಳು ಹಾಗೂ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.